ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಚಂದ್ರನಾಥ್ ರಾಥ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳನ್ನು ಬಂಧಿಸಲು ವಿಶೇಷ ತನಿಖಾ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.
ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ ಸಮೀಪ ಬುಧವಾರ ರಾತ್ರಿ ಈ ದಾಳಿ ನಡೆದಿದ್ದು, ಘಟನೆ ಬಳಿಕ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿ ಇದನ್ನು “ಗುರಿಯಾಗಿಸಿ ನಡೆಸಿದ ರಾಜಕೀಯ ಹತ್ಯೆ” ಎಂದು ಆರೋಪಿಸಿದ್ದು, ಕಾರ್ಯಕರ್ತರು ಮಧ್ಯಮಗ್ರಾಮ, ದೋಲ್ತಾಲಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಬುಧವಾರ ರಾತ್ರಿ ಸುಮಾರು 10.30ರ ವೇಳೆಗೆ ಚಂದ್ರನಾಥ್ ರಾಥ್ ಅವರು ಕೊಲ್ಕತ್ತಾದಿಂದ ಮಧ್ಯಮಗ್ರಾಮದಲ್ಲಿರುವ ತಮ್ಮ ಮನೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ದೋಲ್ತಾಲಾ ಪ್ರದೇಶದ ಬಳಿ ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಅವರ ಕಾರನ್ನು ಅಡ್ಡಗಟ್ಟಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಚಂದ್ರನಾಥ್ ರಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ ಬುದ್ಧದೇವ್ ಬೆರಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೊಲ್ಕತ್ತಾದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಾಳಿಕೋರರು 6ರಿಂದ 10 ಸುತ್ತು ಗುಂಡು ಹಾರಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಹೆಲ್ಮೆಟ್ ಧರಿಸಿದ್ದರ ಜೊತೆಗೆ ನಕಲಿ ನಂಬರ್ ಪ್ಲೇಟ್ ಹೊಂದಿದ್ದ ಬೈಕ್‌ಗಳನ್ನು ಬಳಸಿದ್ದಾರೆ ಎನ್ನಲಾಗಿದೆ. ಸ್ಥಳದಿಂದ ಜೀವಂತ ಗುಂಡುಗಳು ಹಾಗೂ ಇತರೆ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ದುಷ್ಕರ್ಮಿಗಳು ಅತ್ಯಾಧುನಿಕ ಗ್ಲಾಕ್ ಮಾದರಿಯ ಪಿಸ್ತೂಲ್ ಬಳಸಿರುವ ಶಂಕೆ ವ್ಯಕ್ತವಾಗಿದೆ. “ಇಂತಹ ಶಸ್ತ್ರಾಸ್ತ್ರಗಳನ್ನು ಸಾಮಾನ್ಯ ಅಪರಾಧಿಗಳು ಬಳಸುವುದಿಲ್ಲ. ವೃತ್ತಿಪರ ಶೂಟರ್‌ಗಳ ಕೈವಾಡವಿದೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯ ಡಿಜಿಪಿ ಹಾಗೂ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿ, ಕರೆ ದಾಖಲೆಗಳು ಹಾಗೂ ಇತರೆ ತಾಂತ್ರಿಕ ಮಾಹಿತಿಗಳ ಆಧಾರದಲ್ಲಿ ತನಿಖೆ ಮುಂದುವರಿದಿದೆ.
ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಕೆಲವೇ ದಿನಗಳಲ್ಲಿ ಈ ಹತ್ಯೆ ನಡೆದಿರುವುದು ರಾಜಕೀಯ ವಲಯದಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ಬಿಜೆಪಿ ಟಿಎಂಸಿ ವಿರುದ್ಧ ಪ್ರತೀಕಾರ ರಾಜಕೀಯದ ಆರೋಪ ಮಾಡುತ್ತಿದ್ದರೆ, ಟಿಎಂಸಿ ಕೂಡ ತಮ್ಮ ಕಾರ್ಯಕರ್ತರ ಮೇಲೂ ಹಲವು ಜಿಲ್ಲೆಗಳಲ್ಲಿ ದಾಳಿಗಳು ನಡೆದಿವೆ ಎಂದು ಪ್ರತಿಯಾಗಿ ಆರೋಪಿಸಿದೆ.