ಬಳ್ಳಾರಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ್ದಾರೆ.
ಸಿರುಗುಪ್ಪದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇಇ) ತಿಪ್ಪೇಸ್ವಾಮಿ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಲೋಕಾಯುಕ್ತ ಎಸ್ಪಿ ವಾಸುದೇವ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಸಿರುಗುಪ್ಪದ ಕಚೇರಿ, ಬಳ್ಳಾರಿಯ ಹನುಮಾನ್ ನಗರದಲ್ಲಿರುವ ನಿವಾಸ ಹಾಗೂ ಕುಡುತಿನಿಯಲ್ಲಿರುವ ಮತ್ತೊಂದು ನಿವಾಸ ಸೇರಿದಂತೆ ಒಟ್ಟು ಮೂರು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.
ಪ್ರತ್ಯೇಕ ಮೂರು ತಂಡಗಳಾಗಿ ವಿಭಜನೆಗೊಂಡ ಅಧಿಕಾರಿಗಳು ಮನೆ ಹಾಗೂ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಆಸ್ತಿ-ಪಾಸ್ತಿ, ಬ್ಯಾಂಕ್ ದಾಖಲೆಗಳು ಹಾಗೂ ಇತರೆ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ದಾಳಿಯಲ್ಲಿ ಮಹತ್ವದ ದಾಖಲೆಗಳು ಪತ್ತೆಯಾಗುವ ಸಾಧ್ಯತೆ ಇದ್ದು, ಪರಿಶೀಲನೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ. ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆಯಿಂದ ಸಿರುಗುಪ್ಪ ಹಾಗೂ ಬಳ್ಳಾರಿ ಪ್ರದೇಶದಲ್ಲಿ ಚರ್ಚೆಗೆ ಗ್ರಾಸವಾಗಿದೆ.