ವಿಜಯನಗರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಎರಡನೇ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರೊಬೇಷನರಿ ಪಿಎಸ್‌ಐ ದೊರೆನಾಯ್ಕ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ತಾಂಡಾ ನಿವಾಸಿಯಾಗಿರುವ ದೊರೆನಾಯ್ಕ್, ಮೊದಲು ತಮ್ಮದೇ ತಾಂಡಾದ ಯುವತಿಯನ್ನು ವಿವಾಹವಾಗಿದ್ದರು. ಬಳಿಕ ದಾವಣಗೆರೆ ಸಮೀಪದ ಹುಲಿಕಟ್ಟಿ ತಾಂಡಾದ ಮತ್ತೊಬ್ಬ ಯುವತಿಯನ್ನು ಎರಡನೇ ವಿವಾಹವಾಗಿದ್ದರೆಂದು ತಿಳಿದುಬಂದಿದೆ.
ಇತ್ತೀಚೆಗೆ ಎರಡನೇ ಪತ್ನಿಯೊಂದಿಗೆ ಕೌಟುಂಬಿಕ ಕಲಹ ತೀವ್ರಗೊಂಡ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣವೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಗೆ ಸಂಬಂಧಿಸಿದಂತೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪ್ರೊಬೇಷನರಿ ಪಿಎಸ್‌ಐ ದೊರೆನಾಯ್ಕ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.